ಇಂದು ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ....
ಬೆಂಗಳೂರು (ಜ.3): ಮಾಸಿಕ ಗೌರವಧನ 12 ಸಾವಿರ ರೂ. ನಿಗದಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ನಡೆಯುತ್ತಿದೆ. ಹಾವೇರಿ, ರಾಯಚೂರು, ಹುಬ್ಬಳ್ಳಿ, ಹಿರೇಕೆರೂರು ಸೇರಿ ಹಲವು ಜಿಲ್ಲೆಗಳಿಂದ ಆಶಾ ಕಾರ್ಯಕರ್ತೆಯರು ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಕಳೆದ ವರ್ಷ ಜೂನ್ ತಿಂಗಳಲ್ಲಿ ಕೂಡ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು. ಆದರೂ ಅವರ ಬೇಡಿಕೆ ಈಡೇರದ ಕಾರಣ ಇದೀಗ ಮತ್ತೊಮ್ಮೆ ಪ್ರತಿಭಟನೆಯ ಹಾದಿ ತುಳಿದಿದ್ದು, ಇಂದು ಬೆಳಗ್ಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೆ ಜಾಥಾ ನಡೆಸಲಿದ್ದಾರೆ.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ನಡೆಯುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಳ್ಳುವ ಆಶಾ ಕಾರ್ಯಕರ್ತೆಯರಿಗೆ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ.
ಭದ್ರತೆಗಾಗಿ ಸುಮಾರು 300 ಪೊಲೀಸರ ನಿಯೋಜನೆ ಮಾಡಲಾಗಿದೆ. 5 ಕೆಎಸ್ಆರ್ಪಿ ತುಕಡಿ, 3 ಸಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರತಿಭಟನಾಕಾರರ ಸಂಖ್ಯೆಯನ್ನು ಗಮನಿಸಿ ನಂತರ ಭದ್ರತೆ ಹೆಚ್ಚಳ ಮಾಡಲಾಗುತ್ತದೆ.