ಸರ್ಕಾರದ ಕಾರ್ಯವೈಖರಿಯನ್ನು ವಿರೋಧಿಸಿ ಕೈ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ....!

ಬಿಜೆಪಿ ಸರ್ಕಾರದ ಕಾರ್ಯವೈಖರಿಯನ್ನು ಹಾಗೂ ಬೀದರ್ ನ ಶಾಹೀನ್ ಶಾಲೆಯ  ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೃಹತ್ ಪ್ರತಿಭಟನೆಯನ್ನು ನಡೆಸಲು ಮುಂದಾಗಿದ್ದಾರೆ. ಪ್ರತಿಭಟನೆ ವೇಳೆ ಸಿಎಂ ಬಿ.ಎಸ್.ವೈ   ನಿವಾಸದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ ಇರುವುದರಿಂದ ಸಿಎಂ ನಿವಾಸಕ್ಕೆ ಪೊಲೀಸರ ಭದ್ರತೆಯನ್ನು ಹೆಚ್ಚಿಸಲಾಗಿದೆ. 

ಶಾಹೀನ್ ಶಾಲೆಯಲ್ಲಿ ವಿದ್ಯಾರ್ಥಿಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ್ದನ್ನೇ ಆಧರಿಸಿ ಬೀದರ್ ಪೊಲೀಸರು ಶಾಲೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಇದಕ್ಕೆ ಕಾರಣ ರಾಜ್ಯ ಬಿಜೆಪಿ ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಎಂದು ಕಾಂಗ್ರೆಸ್ ನಾಯಕರು ಆರೋಪಿಸಿ, ಇದೇ ಕಾರಣಕ್ಕೆ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನಾ ರ್ಯಾಲಿಯನ್ನು ಹಾಕಿಕೊಂಡಿದ್ದಾರೆ.

ಬೆಂಗಳೂರಿನ ಆನಂದ ರಾವ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಯಲಿದೆ. ಅಲ್ಲಿಂದ ಪ್ರತಿಭಟನಾಕಾರರು ಬೃಹತ್ ರ್ಯಾಲಿ ಮೂಲಕ ಸಿಎಂ ನಿವಾಸ ಧವಳಗಿರಿ ಮೇಲೆ ಮುತ್ತಿಗೆ ಹಾಕುವ ಸಾಧ್ಯತೆ ಇರುವುದರಿಂದ, ಸಿಎಂ ಧವಳಗಿರಿ ನಿವಾಸ ಹಾಗೂ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದ ಮುಂದೆ ಇಬ್ಬರು ಎಸಿಪಿಗಳ ನೇತೃತ್ವದಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ ಮಾಡಲಾಗಿದೆ.