ಭೂಕಬಳಿಕೆ ಪ್ರಕರಣ ಹೆಚ್. ಡಿ ಕೆ ಗೆ ವಿವರ ಕೇಳಿದ ಕೋರ್ಟ್..

ಭೂಕಬಳಿಕೆ ಪ್ರಕರಣ ಮಾಜಿ ಸಿ.ಎಂ ಹೆಚ್ಡಿಕೆ ಗೆ ವಿವರ ಕೇಳಿದ ಕೋರ್ಟ್ ..

 ರಾಮನಗರ ಜಿಲ್ಲೆ ಬಿಡದಿ ಹೋಬಳಿಯಲ್ಲಿ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಜಮೀನು ಕಬಳಿಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಅವರ ಸಂಬಂಧಿ ಸಾವಿತ್ರಮ್ಮ ಮತ್ತಿತರರ ವಿರುದ್ಧ ಲೋಕಾಯುಕ್ತರು 2014ರಲ್ಲಿ ಹೊರಡಿಸಿದ್ದ ಆದೇಶದಂತೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.
ಈ ಕುರಿತಂತೆ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌. ಹಿರೇಮಠ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ಮತ್ತು ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಕೀಲರು, ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ವಿವಿಧ ಸರ್ವೇ ನಂಬರ್‌ಗಳಲ್ಲಿ ಸುಮಾರು 54 ಎಕರೆ ಜಮೀನನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಂಬಂಧಿ ಸಾವಿತ್ರಮ್ಮ ಮತ್ತು ಶಾಸಕ ಡಿ.ಸಿ.ತಮ್ಮಣ್ಣ ಕಬಳಿಕೆ ಮಾಡಿದ್ದಾರೆ. ಈ ಸಂಬಂಧ ಕರ್ನಾಟಕ ಲೋಕಾಯುಕ್ತ 2014 ಆ. 5ರಂದು ನೀಡಿದ ಆದೇಶದಲ್ಲಿ ಒತ್ತುವರಿಯನ್ನು ಹದಿನೈದು ದಿನಗಳಲ್ಲಿ ಕ್ರಮ ಜರುಗಿಸಬೇಕು. ಭೂ ಒತ್ತುವರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿತ್ತು, ಆದರೂ ಸರ್ಕಾರ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಆ ವಾದ ಆಲಿಸಿದ ನ್ಯಾಯಪೀಠ, ಲೋಕಾಯುಕ್ತರ ವರದಿ ಆಧರಿಸಿ ಕೈಗೊಂಡಿರುವ ಕ್ರಮಗಳ ಕುರಿತು ಮುಂದಿನ ವಿಚಾರಣೆ ವಿವರಣೆ ನೀಡುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.
ಎಚ್‌.ಡಿ. ಕುಮಾರಸ್ವಾಮಿ ಮತ್ತಿತರರು ಕಬಳಿಕೆ ಮಾಡಿರುವ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿದೆ. ಅದರ ಮಾರುಕಟ್ಟೆಮೌಲ್ಯ ಪ್ರತಿ ಎಕರೆಗೆ ಸುಮಾರು 75 ಲಕ್ಷದಿಂದ 1 ಕೋಟಿ ರು. ಇದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರು. ನಷ್ಟವಾಗಿದೆ. ಹೀಗಾಗಿ ಲೋಕಾಯುಕ್ತರ ಆದೇಶದ ಮೇಲೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಅವರ ಸಂಬಂಧಿ ಸಾವಿತ್ರಮ್ಮ, ಶಾಸಕ ಡಿ.ಸಿ.ತಮ್ಮಣ್ಣ ಮತ್ತು ಕರ್ನಾಟಕ ಲೋಕಾಯುಕ್ತ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.